ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2020-21ನೇ ಸಾಲಿನಲ್ಲಿ, “ಸಮೃದ್ಧಿ” ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
“ಬೀದಿಬದಿ ವ್ಯಾಪಾರಿ” ಎಂದು ನೋಂದಣಿ ಮಾಡಿಸಿರುವ ಗುರುತಿನ ಚೀಟಿಯನ್ನು ಹೊಂದಿರುವ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕಿನ ದಮನಿತ ಮಹಿಳೆಯರು ಮತ್ತು ಅವರ ಹೆಣ್ಣು ಮಕ್ಕಳು, ಅಲೆಮಾರಿ ಬುಡಕಟ್ಟು ಜನಾಂಗದ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಮಹಿಳೆಯರು ಮಾತ್ರ ಸಮೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಪ್ರತಿ ಫಲಾನುಭವಿಗೆ ತಲಾ ರೂ. 10,000/-ಗಳ ಸಹಾಯಧನ ನೀಡಲು ಅವಕಾಶವಿರುತ್ತದೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು 2021ರ ಜನವರಿ 15 ಕೊನೆಯ ದಿನವಾಗಿದೆ.
ಅರ್ಹತೆಗಳು: ಮಹಿಳೆಯರು 18-60 ವರ್ಷಗಳ ವಯೋಮಿತಿಯವರಾಗಿರಬೇಕು. ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆಯಲ್ಲಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಲ್ಲಿ ಪೌರಾಡಳಿತ ಇಲಾಖೆಯಲ್ಲಿ “ಬೀದಿಬದಿ ವ್ಯಾಪಾರಿ” ಎಂದು ನೊಂದಣಿ ಮಾಡಿಸಿರುವ ಗುರುತಿನ ಚೀಟಿ ಹೊಂದಿರಬೇಕು. ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ)ರವರಿಂದ ಬೀದಿಬದಿ ವ್ಯಾಪಾರಿಯೆಂದು ದೃಡೀಕರಿಸಿದ ದಾಖಲೆಯನ್ನು ಪಡೆದಿರಬೇಕು. ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ವಯಸ್ಸಿನ ದೃಡೀಕರಣಕ್ಕೆ ಆಧಾರ್ ಕಾರ್ಡ್ ಹೊಂದಿರಬೇಕು. ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಕಡ್ಡಾಯವಾಗಿ ಖಾತೆ ಹೊಂದಿರಬೇಕು. ಪ.ಜಾತಿ ಅಥವಾ ಪ.ಪಂಗಡದ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ಒಬ್ಬ ಫಲಾನುಭವಿಯು ಕೇವಲ ಒಂದು ಬಾರಿ ಮಾತ್ರ ಸವಲತ್ತು ಪಡೆಯಲು ಅರ್ಹರಿರುತ್ತಾರೆ.
ಅರ್ಜಿ ನಮೂನೆಗಾಗಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಕಚೇರಿಯನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ. ದೇವನಹಳ್ಳಿ ತಾಲ್ಲೂಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

