ಬೆಂ.ಗ್ರಾ.ಜಿಲ್ಲೆ: ಕಸಾಯಿಖಾನೆ ಹಾಗೂ ಕೋಳಿ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಸುರಿಯದೆ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪಶುಸಂಗೋಪನಾ ಹಾಗೂ ಜಿಲ್ಲಾ ಪ್ರಾಣಿ ದಯಾಸಂಘದ ವತಿಯಿಂದ ಜಿಲ್ಲೆಯಲ್ಲಿನ ಗೋಶಾಲೆಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಕಸಾಯಿಖಾನೆಗಳಿದ್ದರೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ಪಡೆಯದಿದ್ದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಜಿ.ಎಂ.ನಾಗರಾಜು ಮಾತನಾಡಿ ಜಿಲ್ಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್, ಶ್ರೀ ಗೋಕುಲ ಸೇವಾ ಸಮಿತಿ ಟ್ರಸ್ಟ್, ಶ್ರೀ ಸ್ವಣಾ೯ಂಭ ವಿದ್ಯಾ ಗುರುಕುಲ, ಶ್ರೀ ಓಂಕಾರ ಚಾರಿಟಬಲ್ ಟ್ರಸ್ಟ್ ಸೇರಿದಂತೆ ನಾಲ್ಕು ಗೋಶಾಲೆಗಳು 2020-21ನೇ ಸಾಲಿನಲ್ಲಿ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಿದ್ದು, ನಾಲ್ಕು ಗೋಶಾಲೆಗಳಿಗೆ ನೆರವು ನೀಡಲು ತೀರ್ಮಾನಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಹಾವು, ನವಿಲು, ಕೋತಿ ಮುಂತಾದ ಪ್ರಾಣಿಗಳನ್ನು ಹಿಡಿದು ನಗರ ಪ್ರದೇಶಗಳಲ್ಲಿ ಆಹಾರ ಹಾಗೂ ಇತರೆ ಉದ್ದೇಶಗಳಿಗೆ ಬಳಕೆ ಮಾಡುತ್ತಿದ್ದು, ಇದನ್ನು ನಿಯಂತ್ರಿಸಲು ಪೊಲೀಸ್ ಹಾಗೂ ಅರಣ್ಯ ಇಲಾಖೆಗೆ ಸೂಚನೆ ನೀಡಬೇಕು ಎಂದು ಜಿಲ್ಲಾ ಸಾಕು ಪ್ರಾಣಿಗಳ ಸಂಘದ ಸದಸ್ಯರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಭೆಯಲ್ಲಿ ಪಶು ಇಲಾಖೆಯ ತಾಂತ್ರಿಕ ಸಹಾಯಕ ನಿರ್ದೇಶಕ ಡಾ.ಅನಿಲ್ಕುಮಾರ್, ಜಿಲ್ಲೆಯ ವಿವಿಧ ಗೋಶಾಲೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ