
ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಮಾರ್ಗಸೂಚಿ ಹಾಗೂ ಶಿಷ್ಟಾಚಾರದ ಪ್ರಕಾರ ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯನ್ನು ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ನಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿನ ಎಲ್ಲಾ ಜನಪ್ರತಿನಿಧಿಗಳನ್ನು ಶಿಷ್ಟಾಚಾರದ ಪ್ರಕಾರ ಆಯಾ ತಾಲ್ಲೂಕಿನ ತಹಶೀಲ್ದಾರರು ಖುದ್ದು ಆಹ್ವಾನಿಸಬೇಕೆಂದು ತಿಳಿಸಿದರಲ್ಲದೆ, ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ಇಲಾಖೆಯ ಅಧಿಕಾರಿಗಳು ಸಹಕಾರ ನೀಡುವಂತೆ ತಿಳಿಸಿದರು.
ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಜಿಲ್ಲೆಯ ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರನ್ನು ಗುರುತಿಸಿ ಅವರಿಗೆ “ಸೇವಾ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ” ಮಾಡಲಾಗುವುದು ಎಂದು ತಿಳಿಸಿದರು.
ಈ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಶೇಷವಾಗಿ ಪಥಸಂಚಲನದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ ಸಿಬ್ಬಂದಿಗಳೊಂದಿಗೆ ಪೌರ ಕಾರ್ಮಿಕರು ಸಹ ಪಾಲ್ಗೊಳ್ಳಲಿದ್ದು, ಸುರಕ್ಷಿತ ದೃಷ್ಟಿಯಿಂದ ಎಲ್ಲರಿಗೂ ಕೋವಿಡ್ ಟೆಸ್ಟ್ ವರದಿ ಪಡೆದುಕೊಳ್ಳುವುದು ಅವಶ್ಯ ಎಂದರು.
ಶಾಲಾ ಮಕ್ಕಳಿಂದ ದೇಶಭಕ್ತಿ ಸಾರುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಬಂಧ ರಾಜ್ಯ ಸರ್ಕಾರದಿಂದ ಕೋವಿಡ್-19 ಮಾರ್ಗಸೂಚಿ ಬಂದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದರಲ್ಲದೆ, ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಹಾಗೂ ಅಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಹಬ್ಬಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಡಿವೈಎಸ್ಪಿ ಟಿ.ರಂಗಪ್ಪ, ಜಯರಾಮ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಆರಾಧ್ಯ ತಹಶೀಲ್ದಾರ್ ಅನಿಲ್ ಕುಮಾರ್, ಮುಜರಾಯಿ ಇಲಾಖೆ ತಹಶೀಲ್ದಾರ್ ಹೇಮಲತಾ, ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿ ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗ್ರೂಪ್ ಮೂಲಕ ನಮ್ಮೊಂದಿಗೆ ಸೇರಿ.

