
ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಅಧಿಕಾರಿಗಳು ಅನಿರೀಕ್ಷಿತವಾಗಿ ದಾಳಿ ನಡೆಸಿ, ಬಾಲಕಾರ್ಮಿಕರನ್ನು ಗುರುತಿಸಿ, ರಕ್ಷಿಸುವುದರೊಂದಿಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಮತ್ತು ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ಯಾರೇಜ್, ನರ್ಸರಿ, ಇಟ್ಟಿಗೆ ಭಟ್ಟಿ, ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಹೆಚ್ಚಾಗಿ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ, ದಾಳಿ ವೇಳೆ, ಬಾಲ ಕಾರ್ಮಿಕರು ಕಂಡುಬಂದಲ್ಲಿ ವಶಕ್ಕೆ ಪಡೆದು, ಶಿಕ್ಷಣ ಕೊಡಿಸುವಂತೆ ಪಾಲಕರಿಗೆ ಅರಿವು ಮೂಡಿಸಿ ಎಂದರು.ಪ್ರತಿ ಮೂರು ತಿಂಗಳಿಗೆ ಕಡ್ಡಾಯವಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕಾರ್ಮಿಕ ನಿರೀಕ್ಷಕರ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಡೆಸಿ, ವರದಿ ಸಲ್ಲಿಸುವಂತೆ ತಿಳಿಸಿದರು.
ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಬರುವ ದೂರುಗಳನ್ನು ಸ್ವೀಕರಿಸಿದ ತಕ್ಷಣವೇ ವಿಳಂಬ ಮಾಡದೆ, ಕಾರ್ಯಪ್ರವೃತ್ತರಾಗಬೇಕು ಎಂದರಲ್ಲದೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸುವುದರಿಂದ ಬಾಲಕಾರ್ಮಿಕರನ್ನು ರಕ್ಷಿಸಲು ಸಹಾಯವಾಗುತ್ತದೆ ಎಂದರು.ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕಲಂ16&17 ಅಡಿಯಲ್ಲಿ ನೇಮಕಗೊಂಡ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸಹಯೋಗದೊಂದಿಗೆ ಆಯೋಜಿಸುವಂತೆ ಸೂಚಿಸಿದರಲ್ಲದೆ, ಶಾಲೆಗಳು ಆರಂಭವಾಗಿದ್ದು, ಗೈರಾಗುತ್ತಿರುವ ಮಕ್ಕಳ ಪಟ್ಟಿಯನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರಿಗೆ ನೀಡುವ ಮೂಲಕ ಬಾಲ ಕಾರ್ಮಿಕರನ್ನು ಗುರುತಿಸಿ, ದುಡಿಸಿಕೊಳ್ಳುವ ಬದಲು ಶಿಕ್ಷಣ ಕೊಡಿಸುವಂತೆ ಪೋಷಕರಿಗೆ ಮನವೊಲಿಸಿ ಎಂದು ತಿಳಿಸಿದರು.
ಕಾರ್ಮಿಕ ಇಲಾಖೆ ವಿಭಾಗ-03ರ ಸಹಾಯಕ ಕಾರ್ಮಿಕ ಆಯುಕ್ತರಾದ ಕಿರಣ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭವ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ ಡಾ.ವಿದ್ಯಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹೇಮಾವತಿ, ಮಕ್ಕಳ ಸಹಾಯವಾಣಿ ಘಟಕದ ಸಂಯೋಜಕ ಮಂಜುನಾಥ, ಕಾರ್ಮಿಕ ನಿರೀಕ್ಷಕರುಗಳು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

