
ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಅನಧಿಕೃತ, ಕಾನೂನು ಬಾಹಿರ, ಅವೈಜ್ಞಾನಿಕ ಗಣಿಗಾರಿಕೆ ಮತ್ತು ಕಲ್ಲು ಪುಡಿ ಮಾಡುವ ಕೆಲಸ ನಡೆಯದಂತೆ ಎಚ್ಚರಿಕೆ ವಹಿಸುವ ಮೂಲಕ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅಧಿಕಾರಿಗಳು ಆಸ್ಪದ ನೀಡಬಾರದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ಟಾಸ್ಕ್ ಪೋರ್ಸ್(ಗಣಿ) ಸಮಿತಿ ಮತ್ತು ಜಿಲ್ಲಾ ಕಲ್ಲುಪುಡಿ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಲ್ಲುಪುಡಿ ಮಾಡುವವರು ಸರ್ಕಾರದಿಂದ ಲೈಸೆನ್ಸ್ ಪಡೆದು, ಪರಿಣಿತಿ ಹೊಂದಿರುವ ಜೊತೆಗೆ ತಂತ್ರಜ್ಞಾನದ ಬಗ್ಗೆ ಅರಿವಿರಬೇಕು ಎಂದು ಹೇಳಿದರು.
ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಕ್ವಾರಿ ಮತ್ತು ಬ್ಲಾಸ್ಟಿಂಗ್ ಚಟುವಟಿಕೆಗಳು ಸಂಪೂರ್ಣವಾಗಿ ನಿಲ್ಲಬೇಕು. ಈ ಸಂಬಂಧ ತಾಲ್ಲೂಕು ಮಟ್ಟದಲ್ಲಿ ಒಂದು ಸಮಿತಿ ರಚಿಸಿ, ನಿಯಮಗಳ ಪಾಲನೆ ಕುರಿತು ಪರಿಶೀಲಿಸಬೇಕು ಎಂದು ತಿಳಿಸಿದರು.
ಸ್ಪೋಟಕ ವಸ್ತುಗಳನ್ನು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಯಾವ ಸ್ಥಳದಿಂದ ಯಾವ ಸ್ಥಳಕ್ಕೆ ಸಾಗಾಣಿಕೆ ಮತ್ತು ಎಷ್ಟು ಪ್ರಮಾಣದಲ್ಲಿ ಸ್ಪೋಟಕ ವಸ್ತುಗಳನ್ನು ಶೇಖರಿಸಿ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟವರು ಸ್ಥಳೀಯ ಪೋಲಿಸ್ ಠಾಣೆಗೆ ಮಾಹಿತಿ ನೀಡಿರಬೇಕು ಎಂದು ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ಅವರು ಮಾತನಾಡಿ ಕೇವಲ ಆದಾಯವನ್ನು ನೋಡದೆ, ಜನರ ಜೀವದ ಕುರಿತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಳ್ಳದೆ, ಕ್ವಾರಿ ನಡೆಸುವುದರಿಂದ ಅನಾಹುತ ಹೆಚ್ಚಾಗುವುದ ಜೊತೆಯಲ್ಲಿ ಸ್ಥಳೀಯವಾಗಿ ಬೆಳೆ ಹಾಗೂ ಸಾರ್ವಜನಿಕರಿಗೂ ತೊಂದರೆ ಆಗುತ್ತಿದೆ ಎಂದರು.
ಕ್ವಾರಿ ಬ್ಲಾಸ್ಟ್ ನಿಂದ ಬೆಳೆ ನಾಶ ಹಾಗೂ ರಾತ್ರಿ ವೇಳೆ ಅಕ್ರಮ ಕ್ವಾರಿ ಬ್ಲಾಸ್ಟ್ ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅಂತಹವರ ವಿರುದ್ಧ ಶೀಘ್ರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪನ್, ಹೆಚ್ಚುವರಿ ಪೋಲಿಸ್ ವರಿಷ್ಠಧಿಕಾರಿ ಲಕ್ಷೀಗಣೇಶ್, ಉಪವಿಭಾಗಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

