
ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಅನಿರೀಕ್ಷಿತವಾಗಿ ದಾಳಿ ನಡೆಸುವ ಮೂಲಕ ತಂಬಾಕು ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿ, ಪ್ರಕರಣ ದಾಖಲಿಸಿ, ದಂಡ ವಿಧಿಸಬೇಕು ಎಂದರು ಅಲ್ಲದೆ ತಾಲ್ಲೂಕು ಮಟ್ಟದಲ್ಲಿ ದಾಳಿ ನಡೆಸಲೆಂದು ನೇಮಕಗೊಂಡಿರುವ ತಂಡಗಳು ದಾಳಿ ವೇಳೆ ಗೌಪ್ಯತೆ ಕಾಪಾಡಿಕೊಳ್ಳುವ ಮೂಲಕ ಮಾಹಿತಿ ಸೋರಿಕೆಯಾಗದಂತೆ ಕ್ರಮವಹಿಸಿ ಹಾಗೂ ಗೌಪ್ಯವಾಗಿ ಹಾಗೂ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿ ಎಂದು ನಿರ್ದೇಶನ ನೀಡಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಅಂಗಡಿ, ಮುಂಗಟ್ಟುಗಳಲ್ಲಿ ತಂಬಾಕು ದುಷ್ಪರಿಣಾಮದ ಕುರಿತ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು, ಶಾಲಾ ವ್ಯಾಪ್ತಿಯಿಂದ 100 ಗಜ ಅಂತರದಲ್ಲಿ ತಂಬಾಕು ಮಾರಾಟ ಮಾಡುವಂತಿಲ್ಲ ಎಂಬ ಸೂಚನಾ ಫಲಕ ಅಳವಡಿಸಿ ಹಾಗೂ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಂಚಾಲಕಿ ಡಾ.ಶಾಂತಲಾ, ಸಲಹೆಗಾರ್ತಿ ಡಾ.ವಿದ್ಯಾರಾಣಿ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

