
ಬೆಂ.ಗ್ರಾ.ಜಿಲ್ಲೆ: ರಾಜ್ಯ ಚುನಾವಣಾ ಆಯೋಗವು ಮೇ-2021 ರ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 318 ಎಎ ಮತ್ತು 318 ಎಬಿ ಅನ್ವಯ ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಾ ಹೊಸಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಹೊಸಕೋಟೆ ತಾಲ್ಲೂಕಿನ ಸಮೇತನಹಳ್ಳಿಯ ಗ್ರಾಮ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿಯ 21 ಸದಸ್ಯ ಸ್ಥಾನಗಳು, ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಗ್ರಾಮ ಪಂಚಾಯಿತಿಯ 01 ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ಚುನಾವಣಾ ವೇಳಾಪಟ್ಟಿಯಂತೆ 2021ರ ಮಾರ್ಚ್ 15ರ ಸೋಮವಾರದಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. 2021ರ ಮಾರ್ಚ್ 19ರ ಶುಕ್ರವಾರದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. 2021ರ ಮಾರ್ಚ್ 20ರ ಶನಿವಾರದಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. 2021ರ ಮಾರ್ಚ್ 22ರ ಸೋಮವಾರದಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. 2021ರ ಮಾರ್ಚ್ 29ರ ಸೋಮವಾರದಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ. 2021ರ ಮಾರ್ಚ್ 30ರ ಮಂಗಳವಾರದಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. 2021ರ ಮಾರ್ಚ್ 31ರ ಬುಧವಾರದಂದು ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ನಡೆಯಲಿದ್ದು, ಮಾರ್ಚ್ 31ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

