
ಬೆಂ.ಗ್ರಾ.ಜಿಲ್ಲೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ 75 ವಾರಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ವಿಶೇಷವಾಗಿ ಆಚರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ, ಆರೋಗ್ಯ ಶಿಬಿರ, ಸ್ವಚ್ಛತಾ ಕಾರ್ಯ, ಮ್ಯಾರಥಾನ್ ಹಾಗೂ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿನ 75 ಕೆರೆಗಳ ಹೂಳೆತ್ತುವುದು, 75 ಕಲ್ಯಾಣಿಗಳ ಸ್ವಚ್ಛತೆ, 75 ಅಂಗನವಾಡಿಗಳಲ್ಲಿ ಕಿಚನ್ ಗಾರ್ಡನ್, ಶಾಲೆಗಳಲ್ಲಿ ಕ್ರೀಡಾಂಗಣದ ಅಭಿವೃದ್ಧಿ, ಯೋಗ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಎನ್.ಎಸ್.ಎಸ್., ಎನ್.ಸಿ.ಸಿ., ಭಾರತೀಯ ಸೇವಾದಳ ಹಾಗೂ ಲಯನ್ ಕ್ಲಬ್ ಸಹಯೋಗದಲ್ಲಿ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವೃದ್ಧಾಶ್ರಮ, ಅನಾಥಾಶ್ರಮ, ವಿಕಲಚೇತನರ ಶಾಲೆಗಳು, ಶಾಲಾ-ಕಾಲೇಜು, ಹಾಸ್ಟೆಲ್‌ಗಳು ಹಾಗೂ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದೇಶಭಕ್ತಿ ಸಾರುವಂತಹ ಕಾರ್ಯಕ್ರಮಗಳನ್ನು ಹಾಗೂ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸುವ ಜೊತೆಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಉಪನ್ಯಾಸ ನೀಡಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಬ್ ಕಾರ್ಡ್ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಪ್ರಸ್ತುತ ಇರುವ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ, ಅವರನ್ನು ಸನ್ಮಾನಿಸುವ ಜೊತೆಗೆ ಅವರಿಂದ ಸಾರ್ವಜನಿಕರಿಗೆ ಉಪನ್ಯಾಸ ನೀಡಲು ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸ್ಥಳೀಯ ಇತಿಹಾಸ, ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಯುವಜನತೆಗೆ ತಿಳಿಸಬೇಕು ಎಂದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಇಲಾಖೆಯ ಯೋಜನೆಗಳನ್ನು ಹಾಗೂ ಸವಲತ್ತುಗಳನ್ನು ಪರಿಚಯಿಸುವ ವಸ್ತು ಪ್ರದರ್ಶನ ನಡೆಸಬೇಕು ಎಂದರಲ್ಲದೆ, 75 ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ ವ್ಯಾಪ್ತಿಯಲ್ಲಿನ ವಿಶೇಷ ಪಾರಂಪರಿಕ ಕಟ್ಟಡಗಳಲ್ಲಿ ವಸ್ತು ಪ್ರದರ್ಶನ ಆಯೋಜಿಸುವ ಜೊತೆಗೆ ಪಾರಂಪರಿಕ ತಾಣಗಳು ಮತ್ತು ಕೋಟೆಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡುವಲ್ಲಿ ಶ್ರಮಿಸಬೇಕು ಎಂದರು. ಸ್ಥಳೀಯ ಸಾಂಸ್ಕೃತಿಕ ಪ್ರಕಾರಗಳನ್ನು ಗುರುತಿಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಏರ್ಪಡಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ, ಜಿ.ಪಂ. ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ.ಬಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭವ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

