
ಬೆಂ.ಗ್ರಾ.ಜಿಲ್ಲೆ: ಸಂವಿಧಾನದಲ್ಲಿ ಮಕ್ಕಳಿಗೆ ಕೆಲವು ಪ್ರಮುಖ ಹಕ್ಕುಗಳನ್ನು ನೀಡಲಾಗಿದ್ದು, ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸುವ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರ ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು ಕಲಂ 16 ಮತ್ತು 17 ರಡಿಯಲ್ಲಿ ನೇಮಕಗೊಂಡ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ”ವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ವಿರೋಧಿ ಬಗ್ಗೆ ಬೀದಿ ನಾಟಕಗಳ ಮೂಲಕ ಜಿಲ್ಲಾಡಳಿತದ ವತಿಯಿಂದ ಜಿಲ್ಲಾದ್ಯಂತ ಅರಿವು ಮೂಡಿಸಲಾಗಿದ್ದು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬಾಲಕಾರ್ಮಿಕರನ್ನು ರಕ್ಷಿಸುವ ಕಾರ್ಯಮಾಡುವ ಮೂಲಕ ಮುಂದಿನ ಪೀಳಿಗೆಯನ್ನು ರಕ್ಷಿಸಬೇಕು ತಪ್ಪಿದಲ್ಲಿ ಯುವ ಜನಾಂಗದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.
ಬಾಲಕಾರ್ಮಿಕ ಪದ್ಧತಿ ತಡೆಯದಿದ್ದರೆ, ಮುಂದಿನ ದಿನಗಳಲ್ಲಿ ಅವರ ಜೀವನ ಕಷ್ಟಕರವಾಗುತ್ತದೆ ಎಂದರಲ್ಲದೆ, ಪೊಲೀಸ್ ಇಲಾಖೆ ಇತರೆ ಇಲಾಖೆಗಳ ಜೊತೆ ಸಹಕಾರದೊಂದಿಗೆ ಕಾರ್ಯ ನಿರ್ವಹಿಸಿ, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಕೈಜೋಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, 14 ವರ್ಷದೊಳಗಿನ ಮಕ್ಕಳು ಹಾಗೂ 18 ವರ್ಷದೊಳಗಿನ ಪ್ರೌಢ ವ್ಯವಸ್ಥೆಯ ಮಕ್ಕಳು ಬಡತನ, ಸಾಮಾಜಿಕ ಒತ್ತಡ, ಸ್ಥಳೀಯ ಸಂಸ್ಕೃತಿ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಕೈಗಾರಿಕಾ ಪ್ರದೇಶ, ಕಂಪನಿಗಳಲ್ಲಿ ಕೆಲಸ ಮಾಡುವುದು ಸರಿಯಲ್ಲ ಎಂದರಲ್ಲದೆ, ಜೀತಪದ್ದತಿ, ಮಲಹೊರುವ ಪದ್ದತಿ, ಅಪಾಯಕಾರಿ ಅಥವಾ ಅಪಾಯಕಾರಿಯಲ್ಲದ ಕೆಲಸಗಳಲ್ಲಿ ತೊಡಗಿರುವುದು ಗಮನಕ್ಕೆ ಬಂದಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಬೇಕು ಎಂದರು.
ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಮಕ್ಕಳು ಕಾರ್ಮಿಕರಾದರೆ, ಅವರ ಬೌದ್ಧಿಕ ಬೆಳವಣಿಗೆ ಕುಂಠಿತವಾಗುತ್ತದೆ ಅಲ್ಲದೆ, ಶಿಕ್ಷಣ ದೊರೆಯದೆ ಮುಂದಿನ ದಿನಗಳಲ್ಲಿ ಹಲವಾರು ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿರುವ ಕಾರಣ, ಸರ್ಕಾರದ ನೀತಿಗಳಿಗೆ ಅನುಗುಣವಾಗಿ ಮಕ್ಕಳು ಬಾಲ್ಯಾವಸ್ಥೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳುವಂತೆ ಅಧಿಕಾರಿಗಳು ಗಮನ ಹರಿಸಬೇಕು ಹಾಗೂ ಬಾಲ ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದು ಅಗತ್ಯವಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ ಮಾತನಾಡಿ, ಸಮಾಜಘಾತುಕ ಕೆಲಸಗಳು ನಮಗೆ ಸಂಬಂಧಿಸಿದ್ದಲ್ಲ ಎಂದು ಸಾರ್ವಜನಿಕರು ಮೌನವಹಿಸುವುದು ನಿಜವಾದ ಸಮಾಜಘಾತುಕತೆಯಾಗಿದ್ದು, ಇಂತಹ ನಿಲುವುಗಳು ಬದಲಾಗದೆ ಇದ್ದರೆ ಅನಿಷ್ಟ ಪದ್ಧತಿಗಳು ಮುಂದುವರೆಯುತ್ತಲೇ ಇರುತ್ತವೆ ಎಂದರು.
ಕೇವಲ ನಾವು ಬೆಳೆದರೆ ಸಾಕಾಗುವುದಿಲ್ಲ ನಮ್ಮ ಜೊತೆ ಸಮಾಜವನ್ನು ಬೆಳೆಸುವುದರೊಂದಿಗೆ ದೇಶದ ಬೆಳವಣಿಗೆಗೆ ಸಹಕರಿಸಬೇಕು ಹಾಗೂ ಎಲ್ಲಾ ಅಧಿಕಾರಿಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕಾಯ್ದೆ ಹಾಗೂ ನೀತಿಗಳನ್ವಯ ಕಾರ್ಯನಿರ್ವಹಿಸುವುದರೊಂದಿಗೆ ಬಾಲಕಾರ್ಮಿಕರನ್ನು ಗುರುತಿಸಿ, ರಕ್ಷಿಸಿ, ಬಾಲ ಕಾರ್ಮಿಕ ಪದ್ಧತಿಯಿಂದ ಅವರನ್ನು ಮುಕ್ತಗೊಳಿಸಬೇಕು ಎಂದು ತಿಳಿಸಿದರು.
ವಿಭಾಗ-03 ರ ಸಹಾಯಕ ಕಾರ್ಮಿಕ ಆಯುಕ್ತ ತಮ್ಮಣ್ಣ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಬಾಲಕಾರ್ಮಿಕತೆಯಿಂದಾಗಿ ಮಕ್ಕಳು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿದ್ದು, ಸರ್ವೋಚ್ಛ ನ್ಯಾಯಾಲಯ ತನ್ನ ಹಲವು ಪ್ರಕರಣಗಳಲ್ಲಿ ಮಕ್ಕಳ ಹಕ್ಕುಗಳು ಹಾಗೂ ಕಾಯ್ದೆಗಳ ಬಗ್ಗೆ ಉಲ್ಲೇಖಿಸಿದೆ ಎಂದರಲ್ಲದೆ, ಬಾಲಕಾರ್ಮಿಕತೆ ವಿರೋಧಿ ಕುರಿತ ಹಕ್ಕುಗಳಿಗೆ ಕೆಲವು ತಿದ್ದುಪಡಿಯಾದ ನಂತರ ಬದಲಾವಣೆಗಳಾಗಿದ್ದು, ಅಧಿಕಾರಿಗಳು ಸಾರ್ವಜನಿಕರಿಂದ ಹಾಗೂ ಮಕ್ಕಳ ಸಹಾಯವಾಣಿಯಿಂದ ಬರುವ ದೂರುಗಳನ್ನು ನಿರ್ಲಕ್ಷಿಸದೆ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮು ಜೋಗಿಹಳ್ಳಿ ಅವರು ಮಾತನಾಡಿ, ಬಾಲ್ಯವನ್ನು ಅನುಭವಿಸಬೇಕಾದದ್ದು ಮಕ್ಕಳ ಹಕ್ಕು. ಆದರೆ ಮಕ್ಕಳಿಗೆ ಅವರ ಹಕ್ಕುಗಳನ್ನು ತಲುಪಿಸಲು ನಾವು ವಿಫಲವಾಗಿದ್ದೇವೆ ಹಾಗೂ ನಮ್ಮ ವೈಯಕ್ತಿಕ ಧೋರಣೆಗಳು ಬದಲಾಗದಾಗ ಮಾತ್ರ ಮಕ್ಕಳ ಹಕ್ಕುಗಳನ್ನು ರಕ್ಷಿಸಬಹುದು ಹೇಳಿದರಲ್ಲದೆ. ತಾವೇ ರಚಿಸಿದ ಮಕ್ಕಳ ಹಕ್ಕುಗಳ ಗೀತೆಯನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ಚೈಲ್ಡ್ ರೈಟ್ಸ್ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕ ಹಾಗೂ ಸಂಪನ್ಮೂಲ ವ್ಯಕ್ತಿ ಎನ್.ವಿ.ವಾಸುದೇವ ಶರ್ಮಾ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೋಜನಾ ನಿರ್ದೇಶಕ ಸುಬ್ಬರಾವ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ನಿರ್ಮೂಲನೆ ಕುರಿತು ಅಪರ ಜಿಲ್ಲಾಧಿಕಾರಿ ಜಗದೀಶ.ಕೆ.ನಾಯಕ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ವೇದಿಕೆ ಕಾರ್ಯಕ್ರಮದ ನಂತರ ಚೈಲ್ಡ್ ರೈಟ್ಸ್ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕ ಹಾಗೂ ಸಂಪನ್ಮೂಲ ವ್ಯಕ್ತಿಯಾದ ಎನ್.ವಿ.ವಾಸುದೇವ ಶರ್ಮಾ ಅವರು “ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರ ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು ಕಲಂ 16 ಮತ್ತು 17” ರಡಿಯಲ್ಲಿ ನೇಮಕಗೊಂಡ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

