ಬೆಂ.ಗ್ರಾ.ಜಿಲ್ಲೆ: ಕೋವಿಡ್ ನಿಯಮಗಳ ಪಾಲನೆಯೊಂದಿಗೆ, 66ನೇ ಕನ್ನಡ ರಾಜ್ಯೋತ್ಸವವನ್ನು ಬೆಂಗಳೂರು ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು ಎಂದರಲ್ಲದೆ, ಪ್ಲಾಸ್ಟಿಕ್ ರಹಿತ ಕಾರ್ಯಕ್ರಮ ನಡೆಸಲು ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಮಿತಿಯನ್ನು ರಚಿಸುವ ಮುಖೇನ, ಕನ್ನಡಕ್ಕಾಗಿ ಹೋರಾಟ ನಡೆಸಿದ ವ್ಯಕ್ತಿಗಳನ್ನು ಗುರುತಿಸಿ, ಗೌರವಿಸಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು.
ವೇದಿಕೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮ, ಜಾನಪದ ಕಲಾ ತಂಡಗಳ ಪ್ರದರ್ಶನ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಕುಡಿಯುವ ನೀರು, ಉಪಹಾರ ಹಾಗೂ ನೈರ್ಮಲ್ಯ ಕಾಪಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವುದರ ಜೊತೆಗೆ ಕಾರ್ಯಕ್ರಮದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳಾದ ಸ್ಯಾನಿಟೈಸರ್ ಬಳಕೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಹೇಳಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್,ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ. ರಂಗಪ್ಪ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭವ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಅಂತರ್ಜಲ ಹಿರಿಯ ಭೂ ವಿಜ್ಞಾನಿ ಡಾ. ಪಲ್ಲವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ತಹಶೀಲ್ದಾರ್ ಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….