ದೊಡ್ಡಬಳ್ಳಾಪುರ, (ನ.28): ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಸಲು ಹೋಬಳಿ ಕೇಂದ್ರದಲ್ಲಿ ಬರುವ ಡಿಸೆಂಬರ್ 18 ಮತ್ತು 19ರಂದು ನಡೆಸಲು ತೀರ್ಮಾನಿಸಲಾಗಿದೆ.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯಲ್ಲಿ ಹಲವು ಇಲಾಖೆಗಳ ಅಧಿಕಾರಿಗಳ ಗೈರು ಹಾಜರಿ ಹಿನ್ನಲೆಯಲ್ಲಿ ಸಮ್ಮೇಳನ ಸ್ವರೂಪ, ರೂಪರೇಷೆ ಅಂತಿಮಗೊಳಿಸಲು ಸಭೆ ಮುಂದೂಡಿ, ಇದೇ ಗುರುವಾರಕ್ಕೆ ಮತ್ತೆ ಸಭೆ ನಡೆಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿಗಳು ಕೆರೆಗಳ ಒತ್ತುವರಿ, ತ್ಯಾಜ್ಯ ನೀರು ಸಮಸ್ಯೆ ಹಿನ್ನಲೆ ಭೇಟಿ ನೀಡಿರುವ ಕಾರಣ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಗೆ ಬರಲು ಸಾಧ್ಯವಾಗಿಲ್ಲ. ಸಮ್ಮೇಳನದ ಸ್ವಾಗತ ಸಮಿತಿ, ಉಪ ಸಮಿತಿಗಳು, ವಿವಿಧ ಕಾರ್‍ಯಯೋಜನೆ ನಿರ್ಧರಿಸಲು ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಹೀಗಾಗಿ ಮತ್ತೊಂದು ದಿನ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಕನ್ನಡ ಸಂಘಟನೆಗಳ ಮುಖಂಡರಿಂದಲೂ ಇದೇ ಅಭಿಪ್ರಾಯ ವ್ಯಕ್ತವಾದ ಹಿನ್ನಲೆ ಸಭೆಯನ್ನು ಮುಂದೂಡಲಾಯಿತು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಪ್ಪ, ಸಮಾಜ ಕಲ್ಯಾಣಾಧಿಕಾರಿ ಸೋಮಶೇಖರ್, ಭಾರತ ಸೇವಾದಳ ಜಿಲ್ಲಾಧ್ಯಕ್ಷ ಜಿ.ಲಕ್ಷ್ಮೀಪತಿ ಸೇರಿದಂತೆ ಅನೇಕ ಮುಖಂಡರು, ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

