ಬೆಂಗಳೂರು, (ಸೆ.03): ಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಕುರಿತಂತೆ ತಮ್ಮ ಮತಬ್ಯಾಂಕ್ ರಾಜಕಾರಣಕ್ಕಾಗಿ ಕೆಲವರು ಸನಾತನ ಧರ್ಮದ ಬಗ್ಗೆ ನಕಾರಾತ್ಮಕವಾಗಿ ಮಾತನಾಡುತ್ತಿದ್ದಾರೆಂದು ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೇಟೆಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರು ಉದಯನಿಧಿ ಸ್ಟಾಲಿನ್ಖಂಡಿಸಿದ್ದಾರೆ.
ಎಎನ್ಐ ಜೊತೆ ಮಾತನಾಡಿರುವ ಅವರು, “ನಮ್ಮ ಸನಾತನ ಹಿಂದೂ ಧರ್ಮವು ಈ ಇಡೀ ಜಗತ್ತಿನಲ್ಲಿ ಅತ್ಯಂತ ಪ್ರಾಚೀನ ಧರ್ಮವಾಗಿದೆ, ಆದ್ದರಿಂದ ನಾವು ಅದನ್ನು ಸ್ಪಷ್ಟವಾಗಿ ಹೇಳಬಹುದು.
ಈ ಧರ್ಮವೇ ಸರ್ವಧರ್ಮಗಳ ಮಾತೆ…ತಮ್ಮ ಮತಬ್ಯಾಂಕ್ ರಾಜಕಾರಣಕ್ಕಾಗಿ ಕೆಲವರು ಸನಾತನ ಧರ್ಮದ ಬಗ್ಗೆ ನಕಾರಾತ್ಮಕವಾಗಿ ಮಾತನಾಡುತ್ತಿದ್ದಾರೆ.ಈ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದಿದ್ದಾರೆ.
ಶನಿವಾರ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ‘ಸನಾತನ ನಿರ್ಮೂಲನಾ ಸಮಾವೇಶ’ದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಪುತ್ರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಪಾಲ್ಗೊಂಡಿದ್ದರು.
ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, “ಈ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು ಸನಾತನ ವಿರೋಧಿ ಸಮ್ಮೇಳನ ಎಂಬುದಾಗಿ ಆಯೋಜಿಸುವ ಬದಲು ಸನಾತನ ನಿರ್ಮೂಲನಾ ಸಮ್ಮೇಳನ ಎಂದು ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದರು.
“ನಾವು ಕೆಲವು ವಿಷಯಗಳನ್ನು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಒಳ್ಳೆಯದು. ನಾವು ಡೆಂಗ್ಯು, ಮಲೇರಿಯಾ ಅಥವ ಕೋವಿಡ್ ಸೋಂಕನ್ನು ವಿರೋಧಿಸಬಾರದು, ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸಬಾರದು, ಬದಲು ನಿರ್ಮೂಲನೆ ಮಾಡಬೇಕು” ಎಂದರು. ಈ ಹೇಳಿಕೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….