ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತಗಳು ಮತ್ತಷ್ಟು ಚುರುಕಾಗಿದ್ದು, ಇದರ ಪ್ರಭಾವದಿಂದ ಒಳನಾಡಿನಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ.
ಮುಂದಿನ 24 ಗಂಟೆಗಳಲ್ಲಿ 2 ಜಿಲ್ಲೆಗಳಿಗೆ ಆರೆಂಜ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಹವಾಮಾನ ಇಲಾಖೆ ವರದಿಯನ್ವಯ, ಮುಂದಿನ 24 ಗಂಟೆಗಳ ಕಾಲ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹೇಳಿದೆ.
ಬೆಂಗಳೂರಲ್ಲಿ ಮಳೆ ಅವಾಂತರ..!
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಸೋಮವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.
ಇನ್ನೂ 2 ದಿನ ಮಳೆ ಆಗುವ ಮುನ್ಸೂಚನೆ ಸಿಕ್ಕಿದ್ದು, ರಾಜಧಾನಿಯ ಜನರನ್ನ ಮಳೆರಾಯ ಕಾಡಲಿದ್ದಾನೆ.
ಇದರ ನಡುವೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಮಾನ್ಯ ಆರ್.ಅಶೋಕ ಅವರುಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿ, ಸಾರ್ವಜನಿಕರ ಅಹವಾಲು ಕೇಳಲಿದ್ದಾರೆ.
ಅವರೊಂದಿಗೆ ಮಾಜಿ ಉಪ ಮುಖ್ಯಮಂತ್ರಿ ಅಶ್ವಥನಾರಾಯಣ ಹಾಗೂ ಸತೀಶ್ ರೆಡ್ಡಿ ಅವರು ಇರುತ್ತಾರೆ.