ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು (ZP, TP) ಪಂಚಾಯಿತಿಗಳಿಗೆ ಚುನಾವಣೆ ಸದ್ಯಕ್ಕೆ ನಡೆಯುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ.
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಮೀಸಲಾತಿ ಅಂತಿಮಗೊಳಿಸಲು ಕಳೆದೊಂದು ವರ್ಷದಿಂದ ಹೈಕೋರ್ಟ್ನಿಂದ ಪದೇ ಪದೇ ಕಾಲಾವಕಾಶ ಕೇಳುತ್ತಲೇ ಬಂದಿರುವ ಸರ್ಕಾರ, ಇದೀಗ ಪುನಃ ನಾಲ್ಕು ವಾರ ಕಾಲಾ ವಕಾಶ ಕೋರಿದೆ.
ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಪಂ, ತಾಪಂ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಾಗಿ, ಜನವರಿ ಮೊದಲ ವಾರದವರೆಗೆ ಸಮಯಬೇಕು ಎಂದು ಕೋರಿದರು.
ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿತು. ಅಂದು ಸರ್ಕಾರಕ್ಕೆ ಕಾಲಾವಕಾಶ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದಿತು.